
ಹಾವೇರಿ, ಆ. 2: ಉತ್ತಮ ಶಿಕ್ಷಣವೇ ವ್ಯಕ್ತಿಯ ಬದುಕನ್ನು ರೂಪಿಸುವ ಶಕ್ತಿಯಾಗಿದ್ದು, ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ಅವಧಿಯನ್ನು ಸದುಪಯೋಗಪಡಿಸಿಕೊಂಡು ಸಾಧಕರಾಗಿ ಸಮಾಜ ಸೇವೆಯತ್ತ ಹೆಜ್ಜೆ ಇಡಬೇಕು ಎಂದು ಕರ್ನಾಟಕ ವಿಧಾನಸಭಾಧ್ಯಕ್ಷರು ಹಾಗೂ ಹಾವೇರಿ ಶಾಸಕ ರುದ್ರಪ್ಪ ಲಮಾಣಿ ಕರೆ ನೀಡಿದರು.
ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 2026-27ನೇ ಸಾಲಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿಯರ ಸ್ವಾಗತ ಸಮಾರಂಭ, ಸಾಂಸ್ಕೃತಿಕ, ಕ್ರೀಡೆ, ಎನ್‌ಎಸ್‌ಎಸ್, ಕಾಲೇಜು ಸಂಸತ್ತು ಸೇರಿದಂತೆ ವಿವಿಧ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ವಿದ್ಯಾರ್ಥಿ ಜೀವನದಲ್ಲಿ ಎದುರಾಗುವ ಸಮಸ್ಯೆಗಳನ್ನು ಸವಾಲಾಗಿ ಸ್ವೀಕರಿಸಿ ಏಕಾಗ್ರತೆಯಿಂದ ಅಧ್ಯಯನ ಮಾಡಿದರೆ ಯಶಸ್ಸಿನ ಬಾಗಿಲುಗಳು ತೆರೆದುಕೊಳ್ಳುತ್ತವೆ. ಶಿಕ್ಷಣದಿಂದ ವ್ಯಕ್ತಿತ್ವ ವಿಕಸನವಾಗುವುದರ ಜೊತೆಗೆ ಸಮಾಜದ ಬಗ್ಗೆ ಜವಾಬ್ದಾರಿಯೂ ಮೂಡುತ್ತದೆ. ವೈಯಕ್ತಿಕ ಯಶಸ್ಸಿನಲ್ಲೇ ಸೀಮಿತವಾಗದೆ ಸಮಾಜದ ಋಣ ತೀರಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಅವರು ತಿಳಿಸಿದರು.
ಬಾಲಕಿಯರ ಸರ್ಕಾರಿ ಕಾಲೇಜಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿನಿಯರು ವ್ಯಾಸಂಗ ಮಾಡುತ್ತಿರುವುದು ಸಂತಸದ ವಿಷಯ. ಕಾಲೇಜಿನಲ್ಲಿ ಉತ್ತಮ ಕಲಿಕಾ ವಾತಾವರಣ ಹಾಗೂ ಅನುಭವಿ ಉಪನ್ಯಾಸಕರಿದ್ದು, ಅವರ ಮಾರ್ಗದರ್ಶನವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು. ವಿದ್ಯಾರ್ಥಿಗಳಿಗೆ ಅಗತ್ಯವಿರುವ ಇನ್ನಷ್ಟು ಮೂಲಸೌಲಭ್ಯಗಳನ್ನು ಕಲ್ಪಿಸಲು ಶ್ರಮಿಸುವುದಾಗಿ ಭರವಸೆ ನೀಡಿದರು.

ಕಾಲೇಜಿನ ಅಭಿವೃದ್ಧಿಗೆ ಎಲ್ಲರ ಸಹಕಾರ ಪ್ರಾಸ್ತಾವಿಕವಾಗಿ ಮಾತನಾಡಿದ ಉಪನ್ಯಾಸಕ ಶೇಖರ ಭಜಂತ್ರಿ, ಕಾಲೇಜಿನ ಬೆಳವಣಿಗೆಯಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು, ಕಾಲೇಜು ಅಭಿವೃದ್ಧಿ ಸಮಿತಿ, ದಾನಿಗಳು ಹಾಗೂ ಸಿಬ್ಬಂದಿಯ ಕೊಡುಗೆ ಮಹತ್ತರವಾಗಿದೆ ಎಂದು ಹೇಳಿದರು.
ಮಾನ್ಯ ಶಾಸಕ ರುದ್ರಪ್ಪ ಲಮಾಣಿ ಅವರ ಸಹಕಾರದಿಂದ ಹೆಚ್ಚುವರಿ ವಿದ್ಯಾರ್ಥಿನಿಯರಿಗೆ ಹಾಸ್ಟೆಲ್ ಸೌಲಭ್ಯ, ಎರಡು ಹೆಚ್ಚುವರಿ ಕೊಠಡಿಗಳ ನಿರ್ಮಾಣ, ಕಾಲೇಜು ಮೈದಾನ ಅಭಿವೃದ್ಧಿ, ನಗರಾಭಿವೃದ್ಧಿ ಪ್ರಾಧಿಕಾರದಿಂದ 10 ಗುಂಟೆ ಜಮೀನು ಮಂಜೂರು ಸೇರಿದಂತೆ ಹಲವು ಸೌಲಭ್ಯಗಳು ದೊರೆತಿವೆ ಎಂದು ವಿವರಿಸಿದರು.

ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಶಿಕ್ಷಣ ಅಗತ್ಯ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಎಫ್.ಎನ್. ಗಾಜಿಗೌಡ್ರು ಮಾತನಾಡಿ, ಸರ್ಕಾರಿ ಕಾಲೇಜುಗಳಲ್ಲಿ ಈ ಕಾಲೇಜು ಉತ್ತಮ ಸಾಧನೆ ಮಾಡುತ್ತಿದ್ದು, ವಿದ್ಯಾರ್ಥಿನಿಯರು ಕಠಿಣ ಪರಿಶ್ರಮದಿಂದ ಗುರಿ ಸಾಧಿಸಬೇಕು ಎಂದು ಹೇಳಿದರು.
ಉದ್ಯಮಿ ಹಾಗೂ ಸಮಾಜಸೇವಕ ಪ್ರಕಾಶ್ ಶೆಟ್ಟಿ ಮಾತನಾಡಿ, ಮೌಲ್ಯಗಳು ಮತ್ತು ಸಂಸ್ಕಾರಗಳೊಂದಿಗೆ ಶಿಕ್ಷಣ ಪಡೆದಾಗ ಮಾತ್ರ ಉತ್ತಮ ನಾಗರಿಕರಾಗಲು ಸಾಧ್ಯ ಎಂದರು.
ವಿಶೇಷ ಉಪನ್ಯಾಸ ನೀಡಿದ ಸಾಹಿತಿ ಡಾ. ಪುಷ್ಪಾವತಿ ಶೆಲವಡಿಮಠ, ತಂತ್ರಜ್ಞಾನದ ಬಳಕೆಯ ಜೊತೆಗೆ ವಿದ್ಯಾರ್ಥಿಗಳು ತಮ್ಮ ಸೃಜನಶೀಲತೆ ಮತ್ತು ಕುತೂಹಲವನ್ನು ಕಾಪಾಡಿಕೊಳ್ಳಬೇಕು. ಶರಣರು ಹಾಗೂ ಸಂತರ ಆದರ್ಶಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಿ ಪೂರ್ವ ವಿಶ್ವವಿದ್ಯಾಲಯ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಮಹದೇವಸ್ವಾಮಿ ಮಾತನಾಡಿ, ವಿದ್ಯಾರ್ಥಿನಿಯರು ಸದಾ ಜಾಗೃತ ಮನೋಭಾವ ಹೊಂದಿದ್ದು, ಉತ್ತಮ ವ್ಯಕ್ತಿತ್ವ ಹಾಗೂ ಸದ್ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಕಾಲೇಜಿನ ಪ್ರಾಚಾರ್ಯ ಬಸವರಾಜ ಇಟ್ಟಿಗುಡಿ ಅಧ್ಯಕ್ಷೀಯ ಭಾಷಣದಲ್ಲಿ, ಗ್ರಾಮೀಣ ಹಾಗೂ ಜಿಲ್ಲೆಯ ವಿವಿಧ ಭಾಗಗಳಿಂದ ಬರುವ ವಿದ್ಯಾರ್ಥಿನಿಯರಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಪಠ್ಯೇತರ ಚಟುವಟಿಕೆಗಳು ಮತ್ತು ಮೌಲ್ಯಾಧಾರಿತ ಕಾರ್ಯಕ್ರಮಗಳನ್ನು ನಿರಂತರವಾಗಿ ಆಯೋಜಿಸಲಾಗುತ್ತಿದೆ ಎಂದು ಹೇಳಿದರು.

ಪ್ರತಿಭಾವಂತ ವಿದ್ಯಾರ್ಥಿನಿಯರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಕಳೆದ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿಭಾಗವಾರು ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿನಿಯರನ್ನು ಸನ್ಮಾನಿಸಿ ಬಹುಮಾನ ವಿತರಿಸಲಾಯಿತು. ವಿವಿಧ ಗಣ್ಯರನ್ನು ಕಾಲೇಜಿನ ವತಿಯಿಂದ ಗೌರವಿಸಲಾಯಿತು.
ಉದ್ಯಮಿ ಹಾಗೂ ಸಮಾಜಸೇವಕ ಪ್ರಭಾಕರರಾವ್ ಮಂಗಳೂರು, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಎಂ.ಎಂ. ಮೈದೂರು, ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಬಸವರಾಜ ಮಾಳಗಿ, ಸಿಬಿಸಿ ಸದಸ್ಯೆ ಸುರೇಖಾ ಪಾಟೀಲ್, ಕಜಾವಿವಿ ಸಿಂಡಿಕೇಟ್ ಸದಸ್ಯ ರಮೇಶ್ ಲಮಾಣಿ, ಜಿಲ್ಲಾ ಉಪನ್ಯಾಸಕರ ಸಂಘದ ಅಧ್ಯಕ್ಷ ಎಸ್.ಎಸ್. ನಿಸ್ಸಿಮ್ ಗೌಡ್ರು ಸೇರಿದಂತೆ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಮಧ್ಯಾಹ್ನ ವಿದ್ಯಾರ್ಥಿನಿಯರಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುವ ಮೂಲಕ ಕಾರ್ಯಕ್ರಮಕ್ಕೆ ಮೆರುಗು ನೀಡಲಾಯಿತು.
WWW.SPARDHANEWS.IN






